ಮನೆ ಮನೆಗೆ ಉಚಿತ ಜಾತಿ, ಶಾಶ್ವತ ನಿವಾಸ ಪ್ರಮಾಣ ಪತ್ರ ವಿತರಣೆ ಯೋಜನೆಗೆ ಸಿಎಂ ಡಿ.ಕೆ.ಶಿವಕುಮಾರ್ ಚಾಲನೆ

ಮನೆ ಮನೆಗೆ ಉಚಿತ ಜಾತಿ, ಶಾಶ್ವತ ನಿವಾಸ ಪ್ರಮಾಣ ಪತ್ರ ವಿತರಣೆ ಯೋಜನೆಗೆ ಸಿಎಂ ಡಿ.ಕೆ.ಶಿವಕುಮಾರ್ ಚಾಲನೆ

ಬೆಂಗಳೂರು: ರಾಜ್ಯದ ಜನರಿಗೆ ಮನೆಬಾಗಿಲಲ್ಲೇ ಉಚಿತ ಜಾತಿ ಪ್ರಮಾಣ ಪತ್ರ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರ ವಿತರಿಸುವ ಮಹತ್ವಾಕಾಂಕ್ಷಿ ಸೇವೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಚಾಲನೆ ನೀಡಿದರು. ಇದೇ ವೇಳೆ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಯ ವೆಬ್‌ಸೈಟ್ ಹಾಗೂ ವಾಟ್ಸ್‌ಆ್ಯಪ್ ಸೇವೆಯನ್ನೂ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಅವರು, “ನಿಮ್ಮ ಮತ–ನಿಮ್ಮ ಹಕ್ಕು, ನಿಮ್ಮ ಮತ–ನಿಮ್ಮ ಬದುಕು” ಎಂಬುದು ಸರ್ಕಾರದ ಬದ್ಧತೆಯಾಗಿದ್ದು, ರಾಜ್ಯದ ಪ್ರತಿಯೊಬ್ಬ ನಾಗರಿಕನ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ಈ ಐತಿಹಾಸಿಕ ಅಭಿಯಾನ ಆರಂಭಿಸಲಾಗಿದೆ ಎಂದು ತಿಳಿಸಿದರು.

ಭಾರತದಲ್ಲಿಯೇ ಮೊದಲ ಬಾರಿಗೆ 4.85 ಕೋಟಿ ಕುಟುಂಬಗಳಿಗೆ ಮನೆ ಮನೆಗೆ ತೆರಳಿ ಉಚಿತವಾಗಿ ಶಾಶ್ವತ ನಿವಾಸ ಪ್ರಮಾಣ ಪತ್ರ ವಿತರಿಸುವ ಕಾರ್ಯವನ್ನು ಕರ್ನಾಟಕ ಸರ್ಕಾರ ಕೈಗೊಂಡಿದೆ. ಚುನಾವಣಾ ಆಯೋಗ ಮತದಾರರ ಪಟ್ಟಿಗೆ ಸೇರಲು ಸೂಚಿಸಿರುವ 11 ದಾಖಲೆಗಳಲ್ಲಿ ಶಾಶ್ವತ ನಿವಾಸ ಪ್ರಮಾಣ ಪತ್ರವೂ ಒಂದಾಗಿದ್ದು, ಈ ಸೇವೆ ನಾಗರಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂದು ಹೇಳಿದರು.

ಈ ಯೋಜನೆ ಸಂಪೂರ್ಣವಾಗಿ ಪಕ್ಷಾತೀತವಾಗಿದ್ದು, ಅಗತ್ಯ ಪ್ರಮಾಣ ಪತ್ರಗಳನ್ನು ಜನರಿಗೆ ತಲುಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸರ್ಕಾರ ಅಧಿಕಾರ ದುರುಪಯೋಗ ಮಾಡುತ್ತಿದೆ ಎಂಬ ಆರೋಪಗಳು ಸರಿಯಲ್ಲ; ಜನರಿಗೆ ಸೇವೆ ಒದಗಿಸುವುದೇ ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ಆನ್‌ಲೈನ್, ಸೇವಾ ಕೇಂದ್ರಗಳು ಹಾಗೂ ಹೋಬಳಿ ಮಟ್ಟದಲ್ಲಿ ಸ್ಥಾಪಿಸಿರುವ ಫೆಸಿಲಿಟೇಷನ್ ಸೆಂಟರ್‌ಗಳ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬಿಎಲ್‌ಒಗಳ ಮೂಲಕವೂ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಹಲವು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುವ ಸಾಧ್ಯತೆ ಇರುವುದರಿಂದ ಪ್ರತಿಯೊಬ್ಬರೂ ತಮ್ಮ ದಾಖಲೆಗಳನ್ನು ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಜನರ ಗುರುತು ಹಾಗೂ ಹಕ್ಕುಗಳ ರಕ್ಷಣೆಯೇ ಸರ್ಕಾರದ ಪ್ರಮುಖ ಉದ್ದೇಶವಾಗಿದ್ದು, ಸರ್ಕಾರಿ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸುವ ಮೂಲಕ ಜನರು ಕಚೇರಿಗಳಿಗೆ ಅಲೆಯುವ ಪರಿಸ್ಥಿತಿಯನ್ನು ತಪ್ಪಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಅಭಿಯಾನ ಯಶಸ್ವಿಗೊಳಿಸಲು ಶ್ರಮಿಸುತ್ತಿರುವ ಗ್ರಾಮ ಲೆಕ್ಕಿಗರು ಸೇರಿದಂತೆ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಮುಖ್ಯಮಂತ್ರಿ ಅಭಿನಂದಿಸಿದರು. “ರಾಜಕಾರಣಕ್ಕಿಂತ ಜನರ ಬದುಕು ಮತ್ತು ಹಕ್ಕುಗಳೇ ಮುಖ್ಯ. ಜನರು ತಮ್ಮ ಪ್ರಮಾಣ ಪತ್ರಗಳನ್ನು ಸುರಕ್ಷಿತವಾಗಿ ಸಂರಕ್ಷಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮನೀಶ್ ಮೌದ್ಗಿಲ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಎಲ್.ಕೆ. ಅತೀಕ್, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು-7204641701

ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ