ಅಡಿಕೆ ಬೆಳೆಗಾರರಿಗೆ ಆತಂಕ ಬೇಡ: ಕಾಂಗ್ರೆಸ್ ಸರ್ಕಾರ ರೈತರ ಪರ-ಕಲಗೋಡು ರತ್ನಾಕರ್
ಅಡಿಕೆ ಬೆಳೆಗಾರರಿಗೆ ಆತಂಕ ಬೇಡ: ಕಾಂಗ್ರೆಸ್ ಸರ್ಕಾರ ರೈತರ ಪರ-ಕಲಗೋಡು ರತ್ನಾಕರ್
ಶಿವಮೊಗ್ಗ : ಕರ್ನಾಟಕದಲ್ಲಿ ಅಡಿಕೆ ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅಡಿಕೆ ಆಧಾರಿತ ಉದ್ಯಮ ಹಾಗೂ ವ್ಯಾಪಾರವನ್ನು ಅವಲಂಬಿಸಿ ಲಕ್ಷಾಂತರ ಕುಟುಂಬಗಳು ಜೀವನ ನಡೆಸುತ್ತಿವೆ. ಇಂತಹ ಸಂದರ್ಭದಲ್ಲಿ ಗುಟ್ಕಾ ನಿಷೇಧದಂತಹ ಯಾವುದೇ ಕ್ರಮಗಳು ಅಡಿಕೆ ಬೆಳೆಗಾರರ ಮೇಲೆ ಪರೋಕ್ಷ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸರ್ಕಾರ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಹಾಗೂ ಕಾಂಗ್ರೆಸ್ ಸರ್ಕಾರ ರೈತರ ಪರ ಎನ್ನುವುದಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರ್ ಅವರು ಹೇಳಿದರು.
ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಾವಣಗೆರೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಅಡಿಕೆ ಬೆಳೆಗಾರರಿದ್ದು, ಅವರ ಜೀವನೋಪಾಯ ಅಡಿಕೆ ಬೆಳೆಯ ಮೇಲೆ ಅವಲಂಬಿತವಾಗಿದೆ. ಆದ್ದರಿಂದ ಅಡಿಕೆ ಬೆಳೆಗಾರರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬಾರದು ಎಂಬುದು ಕಾಂಗ್ರೆಸ್ ಸರ್ಕಾರದ ಸ್ಪಷ್ಟ ನಿಲುವಾಗಿದೆ ಎಂದು ಅವರು ತಿಳಿಸಿದರು.
ಈಗಾಗಲೇ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರು ಹಾಗೂ ಎಲ್ಲಾ ಶಾಸಕರು ಸಹಾ ಮುಖ್ಯಮಂತ್ರಿಗಳ ಜೊತೆ ಈ ವಿಚಾರವಾಗಿ ಚರ್ಚಿಸಿದ್ದು ಅಡಿಕೆ ಬೆಳೆಗಾರರ ಆತಂಕವನ್ನು ಮನದಟ್ಟು ಮಾಡಿದ್ದಾರೆ.
“ಅಡಿಕೆ ಬೆಳೆಗಾರರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬೇಕಾದ ಅಗತ್ಯವಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ಅಡಿಕೆ ಬೆಳೆಗಾರರ ಹಿತವನ್ನು ಕಾಪಾಡಲು ಬದ್ಧವಾಗಿದೆ. ರೈತರ ಬದುಕು ಮತ್ತು ಅವರ ಬೆಳೆಗಳಿಗೆ ಸಂಬಂಧಿಸಿದ ಯಾವುದೇ ವಿಚಾರದಲ್ಲಿ ಸರ್ಕಾರ ಸೂಕ್ಷ್ಮವಾಗಿ ಹಾಗೂ ರೈತಪರವಾಗಿ ನಡೆದುಕೊಳ್ಳಲಿದೆ”.
ರಾಜ್ಯದಲ್ಲಿ ಗುಟ್ಕಾ ನಿಷೇಧಕ್ಕೆ ಸಂಬಂಧಿಸಿದಂತೆ ಉಂಟಾಗಿದ್ದ ಆತಂಕವನ್ನು ಪರಿಗಣಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಬಂಧಿತ ಆದೇಶವನ್ನು ಹಿಂಪಡೆದಿರುವುದು ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ಸ್ವಾಗತಾರ್ಹ ಕ್ರಮವಾಗಿದೆ ಎಂದರು.
ಅಡಿಕೆ ಬೆಳೆಗಾರರ ಹಿತ ಕಾಪಾಡುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ಆದರೆ ಬಿಜೆಪಿಯವರು ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ರಾಜಕೀಯವಾಗಿ ಬಳಸಿಕೊಳ್ಳುವುದನ್ನು ಬಿಟ್ಟು, ಕೇಂದ್ರ ಬಿಜೆಪಿ ಸರ್ಕಾರ ಅಡಿಕೆ ಬೆಳೆಗಾರರ ಹಿತ ಕಾಪಾಡುವ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಬೇಕು ಎಂದು ಅವರು ಆಗ್ರಹಿಸಿದರು.
“ಅಡಿಕೆ ಬೆಳೆಗಾರರ ಹಿತ ಕಾಪಾಡುವ ಬಗ್ಗೆ ಬಿಜೆಪಿಗರಿಗೆ ಯಾವುದೇ ನೈಜ ಆಸಕ್ತಿ ಇಲ್ಲ. ರೈತರಲ್ಲಿ ಅನಗತ್ಯ ಆತಂಕ ಸೃಷ್ಟಿಸುವ ಬದಲು, ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು. ಕಾಂಗ್ರೆಸ್ ಸರ್ಕಾರ ರೈತರ ಪರವಾಗಿ ನಿಂತಿದ್ದು, ಅಡಿಕೆ ಬೆಳೆಗಾರರ ಹಿತಾಸಕ್ತಿಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ”
ಅಡಿಕೆ ಬೆಳೆಗಾರರು ಯಾವುದೇ ವದಂತಿಗಳಿಗೆ ಕಿವಿಗೊಡದೆ, ಸರ್ಕಾರದ ಅಧಿಕೃತ ಮಾಹಿತಿಯನ್ನು ಮಾತ್ರ ಪರಿಗಣಿಸಬೇಕು. ರೈತರ ಹಿತಾಸಕ್ತಿ ಮತ್ತು ಅಡಿಕೆ ಬೆಳೆಗಾರರ ಬದುಕಿನ ರಕ್ಷಣೆಗೆ ಕಾಂಗ್ರೆಸ್ ಸರ್ಕಾರ ಸದಾ ಬದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದರು.
— ಕಲಗೋಡು ರತ್ನಾಕರ್,
ಮಾಜಿ ಅಧ್ಯಕ್ಷರು, ಜಿಲ್ಲಾ ಪಂಚಾಯತ್
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ


Comments
Post a Comment